ದುರ್ಬಲರ ಆರೋಗ್ಯ ತಪಾಸಣೆ ಹೆಚ್ಚಿಸಿ

ಕೊರೊನಾ ಸಾವು ನಿಯಂತ್ರಣಕ್ಕಾಗಿ ದುರ್ಬಲರ ಸರ್ವೇಗೆ ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ, ಜು.22- ಕಂಟೈನ್‍ಮೆಂಟ್ ಮತ್ತು ಬಫರ್ ವಲಯಗಳು ಮಾತ್ರವಲ್ಲದೇ ಆರೋಗ್ಯ ಇಲಾಖೆಗೆ ಮಾಹಿತಿ ಇರುವ ದುರ್ಬಲ ವರ್ಗ ಎಂದು ಪರಿಗಣಿಸಲಾಗುವ ಶುಗರ್, ಬಿಪಿ, ಟಿಬಿ, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ರೋಗಗಳನ್ನು ಹೊಂದಿರುವವರನ್ನು ಪರೀಕ್ಷೆಗೊಳಪಡಿಸಿ ಸೂಕ್ತ ಚಿಕಿತ್ಸೆ ನೀಡಿ ಸಾವಿನ ಸಂಭವದಿಂದ ಅವರನ್ನು ಪಾರು ಮಾಡಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಿನ್ನೆ ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಒಂದು ವಾರದೊಳಗೆ ಮನೆ ಮನೆಗೆ ತೆರಳಿ ಸರ್ವೇ ಮಾಡಿ, ಇಂತಹವರಿಗೆ  ಕೊರೊನಾ ಸೋಂಕು ತಗುಲಿದರೆ ಅವರ ಜೀವ ಉಳಿಸುವುದು ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ಈ ವಿಷಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆ/ನರ್ಸಿಂಗ್ ಹೋಂಗಳು ತಮ್ಮಲ್ಲಿಗೆ ಬರುವ ಎಬಿ-ಎಆರ್‍ಕೆ ಕಾರ್ಡುದಾರರು, ಬಿಪಿಎಲ್ ಕಾರ್ಡುದಾರ ನಾನ್ ಕೋವಿಡ್ ರೋಗಿಗಳನ್ನು ಎಷ್ಟೊತ್ತಿಗೇ ಬಂದರೂ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದಲ್ಲಿ ಕೆಪಿಎಂಇ ಅಡಿ ನೋಂದಣಿ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆರ್‍ಸಿಹೆಚ್‍ಓ ಡಾ. ಮೀನಾಕ್ಷಿ ಮಾತನಾಡಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್‍ನಿಂದ ಗರ್ಭಿಣಿಯರ ದಾಖಲಾತಿ ಕಡಿಮೆ ಆಗಿದೆ. ಏಪ್ರಿಲ್‍ನಿಂದ ಇಲ್ಲಿಯವರೆಗೆ ಒಟ್ಟು 15 ತಾಯಿಂದಿರ ಮರಣ ಸಂಭವಿಸಿದ್ದು 3 ಜನರು ಬೇರೆ ಜಿಲ್ಲೆಗೆ ಸೇರಿದವರಾಗಿದ್ದಾರೆ. 77 ಶಿಶು ಮರಣ ಸಂಭವಿಸಿದ್ದು, 41 ಹೊರ ಜಿಲ್ಲೆಯವರಾಗಿದ್ದರೆ 36 ನಮ್ಮ ಜಿಲ್ಲೆಗೆ ಸೇರಿವೆ ಎಂದರು.

ಎನ್‍ವಿಬಿಡಿಸಿಪಿ ಅಧಿಕಾರಿ ಡಾ.ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್ ಮಾಹಿತಿ ನೀಡಿದರು. ಇದೇ ವೇಳೆ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓ ಸಮ್ಮುಖದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಪೋಸ್ಟರ್‍ಗಳನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಡಿಎಸ್ ಡಾ.ನಾಗರಾಜ್, ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ.ಶ್ರೀಧರ್, ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಆಡಳಿತಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

error: Content is protected !!