ರಾಜ್ಯೋತ್ಸವಕ್ಕೆ ಗೈರಾದ ಉಸ್ತುವಾರಿ ಸಚಿವರ ವಿರುದ್ಧ ಕರವೇ ಆಕ್ರೋಶ

ದಾವಣಗೆರೆ, ನ.3- ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಗೈರು ಹಾಜರಿಗೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯೋತ್ಸವದಲ್ಲಿ ಭಾಗವಹಿಸದೇ ಇರುವುದು ಕನ್ನಡಿಗರಿಗೆ, ಕನ್ನಡಕ್ಕೆ ಮಾಡಿದ ಅಪಮಾನ ಎಂದು ಆರೋಪಿಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು, ಕೆ.ಬಿ.ಬಡಾವಣೆಯಲ್ಲಿ  ಜಿಲ್ಲಾಧ್ಯಕ್ಷ ಎಂ.ಎಸ್.ರಾಮೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಸಚಿವರ  ಪ್ರತಿಕೃತಿ ದಹಿಸಿ, ಸಚಿವರ  ವಿರುದ್ಧ ಘೋಷಣೆ ಕೂಗಿದರು.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಮೇಗೌಡ,   ಸಚಿವ ಭೈರತಿ ಬಸವರಾಜ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ಅನಾರೋಗ್ಯದ ಕುಂಟು ನೆಪ ಹೇಳಿ ನ. 1 ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇದ್ದದ್ದು ಕನ್ನಡಕ್ಕೆ ಮಾಡಿದ ಅವಮಾನ. ಇವರ ಗೈರು ನೋಡಿದರೆ ಇವರಿಗೆ ಎಷ್ಟರ ಮಟ್ಟಿಗೆ ಕನ್ನಡ ಪ್ರೇಮ ಇದೆ ಎಂಬುದು ಸಾಬೀತಾಗಿದೆ ಎಂದರು.

ಪ್ರತಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವದಂದು ರಾಷ್ಟ್ರಧ್ವಜದೊಂದಿಗೆ ನಾಡಧ್ವಜಾರೋಹಣವನ್ನೂ ಮಾಡಬೇಕು. ಆದರೆ, ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ರಾಷ್ಟ್ರಧ್ವಜಾರೋಹಣ ಮಾಡಿ ನಾಡ ಧ್ವಜಾರೋಹಣ ಮಾಡದೇ ಕನ್ನಡ ನಾಡಧ್ವಜಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕ.ರ.ವೇ. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಬಸಮ್ಮ, ಕೆ.ಜಿ. ಬಸವರಾಜು, ಮಂಜುಳಾ ಬಿ., ಗೋಪಾಲ ದೇವರಮನೆ, ರಮೇಶ, ಪರಮೇಶ, ಹಮೀದಾಬಾನು ಮತ್ತಿತರರು ಉಪಸ್ಥಿತರಿದ್ದರು.

error: Content is protected !!