ನೀಟ್-ಜೆಇಇ ಪರೀಕ್ಷೆ ರದ್ದುಪಡಿಸಲು ಎನ್ಎಸ್‌ಯುಐ ಆಗ್ರಹ

ದಾವಣಗೆರೆ, ಆ.29- ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡುವ ಅಥವಾ ರದ್ದುಪಡಿಸು ವಂತೆ ಆಗ್ರಹಿಸಿ ನಗರದಲ್ಲಿ ಇಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ (ಎನ್ ಎಸ್ ಯು ಐ)ದ ಜಿಲ್ಲಾ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ್ದ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುವುದರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಕೊರೊನಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಭಾವನೆಯನ್ನೂ ಸಹ ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳುತ್ತಿಲ್ಲ. ಭಾರತದಲ್ಲಿ ಕೊರೊನಾ ಬಂದು ಮ್ಯಾನ್ ಕಿಲ್ಲರ್ ರೂಪವನ್ನು ಪಡೆದುಕೊಂಡಿದೆ. ಇದರ ಹೊರತಾಗಿಯೂ ಕೇಂದ್ರ ಸರ್ಕಾರ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡದಿರುವುದು ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉತ್ತರ ಭಾರತದಲ್ಲಿ ಕೆಲವೊಂದು ರಾಜ್ಯಗಳಲ್ಲಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ವಿದ್ಯಾರ್ಥಿಗಳಿಗೆ ಮನೆಯಿಂದ ಹೊರಗಡೆ ಬರಲೂ ಸಹ ಆಗುತ್ತಿಲ್ಲ. ಹಾಗಾಗಿ ಪರೀಕ್ಷೆ ಬರೆಯುವುದು ಕಷ್ಟ ಸಾಧ್ಯವಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ತೆಗೆದುಕೊಳ್ಳುವುದು ಅಗತ್ಯವಾದ ಹೆಜ್ಜೆಯಾಗಿದೆ. ಆದರೆ, ಲಕ್ಷಾಂತರ ವಿದ್ಯಾರ್ಥಿಗಳ ಪ್ರಾಣವನ್ನು ಅಪಾಯಕ್ಕೆ ತಳ್ಳುವ ಮೂಲಕ ಅಲ್ಲ. ಒಂದೆಡೆ ಕೇಂದ್ರ ಸರ್ಕಾರವು ಕೊರೊನಾ ಯುಗದ ಮುಖಪುಟದಲ್ಲಿ ಸರ್ಕಾರಿ ಉದ್ಯೋಗಗಳನ್ನು ಕೊನೆಗೊಳಿಸುತ್ತಿದೆ ಮತ್ತು ಮತ್ತೊಂದೆಡೆ ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಕೊರೊನಾ ಸಮಸ್ಯೆ ಸುಧಾರಣೆಯಾಗುವವರೆಗೂ ಮುಂದೂಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಲಿ ರೆಹಮತ್ ಪೈಲ್ವಾನ್, ದಕ್ಷಿಣ ವಿಭಾಗದ ಅಧ್ಯಕ್ಷ ಖಮರ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ರಾನ್, ಹುಸೇನ್, ಖಾದರ್, ಫರೀದ್, ಹರಿಹರ ಅಧ್ಯಕ್ಷ ವಿಜಯ್, ಸಿದ್ದೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!