ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ
ದಾವಣಗೆರೆ, ಸೆ.12 – ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ ಹಣವನ್ನು ಅವರ ಅಭಿವೃದ್ಧಿಗೆ ಮಾತ್ರ ವಿನಿಯೋಗಿಸಬೇಕೇ ಹೊರತು ರಸ್ತೆ ಕಾಮಗಾರಿಗೆ ಬಳಸಬೇಡಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ.
ಶನಿವಾರ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ ಹಣವನ್ನು ಸರಿಯಾಗಿ ಬಳಸಿಕೊಳ್ಳುವಂತೆ ತಿಳಿಸಿದರು.
ಮೈಕ್ರೋ ಫೈನಾನ್ಸ್ ಯೋಜನೆ ಮಹಿಳೆಯರಿಗೆ ವಿಶೇಷವಾಗಿ 15 ಸಾವಿರ ರೂ. ನೀಡುವ ಯೋಜನೆಯಾಗಿದೆ. ಆದರೆ, ಈ ಯೋಜನೆಯ ಹಣ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.
3 ದಿನಗಳಲ್ಲಿ ಬಾಕಿ ಇರುವುದನ್ನು ಮಂಜೂರು ಮಾಡಬೇಕು. ಇಲ್ಲವಾದರೆ ನಿಮ್ಮನ್ನು ಅಮಾನತ್ತು ಮಾಡಲಾಗುವುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರನ್ನು ಎಚ್ಚರಿಸಿದರು.
ಹಳ್ಳಿಗಳಲ್ಲಿ ಸ್ಮಶಾನಗಳು ಇಲ್ಲವಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ನನಗೆ ಮನವಿ ಕೊಟ್ಟರೆ ಶೀಘ್ರವಾಗಿ ಸ್ಮಶಾನವನ್ನು ಮಂಜೂರು ಮಾಡುವುದಾಗಿ ಸಚಿವರು ಹೇಳಿದರು.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ಎಸ್.ವಿ. ರಾಮಚಂದ್ರಪ್ಪ, ಶಾಸಕರಾದ ರಾಮಪ್ಪ, ಪ್ರೊ. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.